ಹಾಸನ: ವಿದ್ಯಾರ್ಥಿಗಳು ಸಂಶೋಧನೆಯಲ್ಲಿ ತೊಡಗಿದರೆ ಮಾತ್ರ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಕಾಲೇಜು ಶಿಕ್ಷಣ ಇಲಾಖೆ ಶೈಕ್ಷಣಿಕ ಜಂಟಿ ನಿರ್ದೇಶಕ ಡಾ|ಕೆ.ಟಿ ಕೃಷ್ಣೇಗೌಡ ಹೇಳಿದರು.
ನಗರದ ಎಂ.ಜಿ ರಸ್ತೆಯಲ್ಲಿರುವ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪದವಿ ಹಾಗೂ ಸ್ನಾತಕೋತ್ತರ (ಎಂ.ಎ) ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ತಮ್ಮ ಪಠ್ಯದ ಜೊತೆಗೆ ತಾವು ಓದುವ ವಿಷಯದ ಬಗ್ಗೆ ಸಂಶೋಧನೆ ನಡೆಸಿದರೆ ಯಶಸ್ಸು ಕಾಣಬಾಹುದು. ಸಾಮಾನ್ಯವಾಗಿ ವೈದ್ಯಕೀಯ ವಿದ್ಯಾರ್ಥಿಗಳು ಹೆಚ್ಚು ಸಂಶೋಧನೆಯಲ್ಲಿ ತೊಡಗುತ್ತಾರೆ, ಹಾಗೆಯೇ ಇತರ ವಿಷಯದ ವಿದ್ಯಾರ್ಥಿಗಳು ತಾವು ಓದುವ ವಿಷಯದ ಬಗ್ಗೆ ಸಂಶೋಧನೆ ನಡೆಸಬೇಕು. ಸಂಶೋಧನೆಯಿಂದಾಗಿ ಒಂದು ವಿಷಯದಲ್ಲಿ ಪಕ್ವತೆ ಕಾಣಲು ಸಾಧ್ಯವಾಗುತ್ತದೆ. ಅದರಲ್ಲೂ ಸ್ನಾತಕೋತ್ತರ ವಿದ್ಯಾರ್ಥಿಗಳು ಸಂಶೋಧನೆಯ ಬಗ್ಗೆ ಮಾಹಿತಿ ಪಡೆದು ಯಶಸ್ಸು ಸಾಧಿಸಿದರೆ ಜೀವನದಲ್ಲಿ ಉತ್ತಮ ಹುದ್ದೆಗೆ ಏರಬಹುದು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ|ಕೆ ಗುರುರಾಜು ಮಾತನಾಡಿ, ಸಂಶೋಧನೆಯಿಂದ ಶೈಕ್ಷಣಿಕ ಗುಣಮಟ್ಟ ಕಾಪಾಡಿಕೊಳ್ಳಬಹುದಾಗಿದೆ. ಯಾವುದೇ ಒಂದು ವಿಷಯದ ಬಗ್ಗೆ ಅಗಾದವಾದ ಜ್ಞಾನ ಪಡೆಯಲು ಸಂಶೋಧನೆ ಅತ್ಯವಶ್ಯಕವಾಗಿದೆ. ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಸಂಶೋಧನೆಯಲ್ಲಿ ತೊಡಗಬೇಕಾದ ಅವಶ್ಯಕತೆ ಇದೆ ಎಂದರು. ಮೈಸೂರಿನ ಮಹಾರಾಣಿ ಕಾಲೇಜಿನ ಸ್ನಾತಕೋತ್ತರ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಡಾ|ಎ. ಆನಂದ್ ಅವರು ವಿದ್ಯಾರ್ಥಿಗಳಿಗೆ ಸಂಶೋಧನೆಯ ಬಗೆಗೆ ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಮಹಿಳಾ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಅಧ್ಯಾಪಕರಾದ ಡಾ|ಎಚ್.ಪಿ ಪೂರ್ಣಿಮ, ರಾಜೀವ್ ಕುಮಾರ್, ಬಿ. ಪ್ರೇಮ್ ಕುಮಾರ್, ಆನಂದ್ ಕುಮಾರ್ ಹಾಗೂ ಇತರರು ಹಾಜರಿದ್ದರು.