ಹಾಸನ: 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ತಪ್ಪದೆ ಮತದಾನ ಮಾಡುವಂತೆ ಅಂತರಾಷ್ಟ್ರೀಯ ಹಾಕಿ ಕ್ರೀಡಾಪಟು ಹಾಗೂ ಯೂತ್ ಐಕಾನ್ ಶೇಷೇಗೌಡ ಸಲಹೆ ನೀಡಿದ್ದಾರೆ.
ತಾಲೂಕಿನ ಶಾಂತಿಗ್ರಾಮ ಪಂಚಾಯಿತಿಯಲ್ಲಿ ಮತದಾನ ಜಾಗೃತಿ ಬೀದಿ ನಾಟಕಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಮತದಾನ ಪ್ರತಿಯೊಬ್ಬರ ಹಕ್ಕಾಗಿದ್ದು, ಯಾವುದೇ ಆಸೆ, ಆಮಿಷಗಳಿಗೆ ಒಳಾಗಾಗದೆ ಮತಗಟ್ಟೆಗೆ ಹೋಗಿ ಮತ ಚಲಾಯಿಸುವ ಮೂಲಕ ಉತ್ತಮ ನಾಯಕರನ್ನು ಆಯ್ಕೆ ಮಾಡಿ ಎಂದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಲ್. ಯಶವಂತ ಮಾತನಾಡಿ, ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕು ಹಾಗೂ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಿದ್ದು, ಅದರ ಸದುಪಯೋಗಪಡಿಸಿಕೊಂಡು ಮತ ಚಲಾಯಿಸುವಂತೆ ತಿಳಿಸಿದ್ದಾರೆ.
ಯಾವುದೇ ಉಡುಗೊರೆ, ವಸ್ತುಗಳಿಗೆ ಬಲಿಯಾಗದೆ ವಿಧಾನಸಭೆ ಚುನಾವಣೆಯಲ್ಲಿ ಶೇ. 100ರಷ್ಟು ಮತ ಚಲಾಯಿಸುವಂತೆ ಹೇಳಿದರು. ಮತದಾನ ಜಾಗೃತಿ ಪೋಸ್ಟರ್ ಮತ್ತು ಬ್ಯಾನರ್‌ಗಳನ್ನು ಹಿಡಿದು ಪ್ರಮುಖ ಬೀದಿಗಳಲ್ಲಿ ಕಾಲ್ನಡಿಗೆ ಜಾಥಾ ಹೋಗುವ ಮೂಲಕ ಸಾರ್ವಜನಿಕರಲ್ಲಿ ಕಡ್ಡಾಯ ಮತದಾನ ಬಗ್ಗೆ ಅರಿವು ಮೂಡಿಸಲಾಯಿತು.
ಬೀದಿ ನಾಟಕ ಪ್ರದರ್ಶನ ಹಾಗೂ ಮತದಾನದ ಗೀತೆಗಳನ್ನು ಹಾಡುವ ಮೂಲಕ ಮತದಾರರ ಪಟ್ಟಿಯಲ್ಲಿ ನೋಂದಾಣಿ ಹಾಗೂ ಮತ ಚಲಾವಣೆಯ ಬಗ್ಗೆ ಜಾಗೃತಿ ಮೂಡಿಸಿದರು. ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಶಿವಕುಮಾರ, ಶಾಂತಿ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ರಮೇಶ, ಶಾಂತಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸುಹಾಸ ಹಾಗೂ ಮತ್ತಿತರರು ಹಾಜರಿದ್ದರು.