ಆಲೂರು: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಎಲ್ಲಾ ಮತದಾರರು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಮತದಾನ ಮಾಡುವುದು ಅಗತ್ಯವಾಗಿದೆ ಎಂದು ತಾಲೂಕು ಸ್ವೀಪ್ ಸಮಿತಿ ನೋಡಲ್ ಅಧಿಕಾರಿ, ಕೃಷಿ ಇಲಾಖೆ ಜಿಲ್ಲಾ ನಿರ್ದೇಶಕಿ ಕೆಸಿ ಸುಷ್ಮಾ ತಿಳಿಸಿದರು.
ಪಟ್ಟಣದ ಬಸ್ ನಿಲ್ದಾಣದ ಮುಂಭಾಗ ತಾಲೂಕು “ಸ್ವೀಪ್ ಸಮಿತಿ” ವತಿಯಿಂದ ಮಾನವ ಸರಪಳಿ ನಿರ್ಮಿಸುವ ಮೂಲಕ “ಮತದಾನ ಜಾಗೃತಿ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನದ ಹಕ್ಕನ್ನು ಹೊಂದಿರುವ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು. ಸಂವಿಧಾನ ಪ್ರತಿಯೊಬ್ಬರಿಗೂ ತಮ್ಮ ಹಕ್ಕನ್ನು ಚಲಾಯಿಸಲು ಹಾಗೂ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲು ಮತದಾನದ ಹಕ್ಕನ್ನು ನೀಡಿದೆ. ಮತದಾನವನ್ನು ಮಾಡದಿದ್ದಲ್ಲಿ ನಮಗೆ ನಾವೇ ಆತ್ಮವಂಚನೆ ಮಾಡಿಕೊಂಡಂತಾಗುತ್ತದೆ. ಮತದಾನಕ್ಕಿಂತ ಮತ್ತೊಂದು ಇಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ ಎನ್ನುವುದು ೨೦೨೩ನೇ ವರ್ಷದ ಧ್ಯೇಯ ವಾಕ್ಯವಾಗಿದ್ದು ಅದರಂತೆ ಪ್ರತಿಯೊಬ್ಬ ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿ ದೇಶದ ಪ್ರಜಾಪ್ರಭುತ್ವವನ್ನು ಬಲ ಪಡಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಮತದಾನದ ಬಗ್ಗೆ ಪ್ರಮಾಣ ವಚನ ಬೋಧಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರೇಶ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎ.ಟಿ ಮಲ್ಲೇಶ, ತಾಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮನು, ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಶೋಭಾ, ಪ್ರೇಮಾನಂದ ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಇದ್ದರು.