ಹಾಸನ: ಸಾರಿಗೆ ಇಲಾಖೆಯ ವತಿಯಿಂದ ಆಯೋಜಿಸಿರುವ ವಾಯಮಾಲಿನ್ಯ ನಿಯಂತ್ರಣ ಹಾಗೂ ಸಾರಿಗೆ ಸುರಕ್ಷತೆ ಬಗೆಗಿನ ಜನ ಜಾಗೃತಿ ವಾಹನ ಸಂಚಾರಕ್ಕೆ ಅಪರ ಜಿಲ್ಲಾಧಿಕಾರಿ ಆನಂದ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯದಾದ್ಯಂತ ಸಾರಿಗೆ ಇಲಾಖೆ ವತಿಯಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ರಸ್ತೆ ಸುರಕ್ಷತೆ ಹಾಗೂ ವಾಯುಮಾಲಿನ್ಯ ನಿಯಂತ್ರಣದ ಬಗ್ಗೆ ಜನ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದ್ದು, ಯುವ ಜನತೆ ಅಪಘಾತಗಳಲ್ಲಿ ಮೃತ ಪಡುತ್ತಿರುವುದು ದುರ್ದೈವ. ಅವರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ವೇಗದ ವಾಹನ ಚಾಲನೆ, ವಾಹನದ ಮೇಲೆ ಹೆಚ್ಚುವರಿ ಭಾರ ಹಾಕುವುದು, ಮಧ್ಯಪಾನ ಮಾಡಿ ವಾಹನ ಚಾಲನೆ ಮಾಡುವುದು ಇಂತಹ ಕಾನೂನು ಬಾಹಿರ ಚಟುವಟಿಕೆಗಳಿಗೆ ವಾಹನ ಮಾಲೀಕರು ಹಾಗೂ ಚಾಲಕರು ಅವಕಾಶ ನೀಡಬಾರದು, ಕಾಲ ಕಾಲಕ್ಕೆ ವಾಹನಗಳ ತಪಾಸಣೆ ಮಾಡಿಸಿ ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಿದರು.
ಈಗಾಗಲೇ ಸಾರಿಗೆ ಇಲಾಖೆಯಿಂದ ವಾಹನ ಚಾಲನೆಗೆ ಅನುಮತಿ ಪ್ರಕ್ರಿಯೆ ಸರಳೀಕರಣಗೊಳಿಸಲಾಗಿದ್ದು ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು, ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಜಾಗೃತಿ ವಾಹನ ಚಲಿಸುತ್ತಿದ್ದು ಗ್ರಾಮೀಣ ಹಾಗೂ ನಗರ ಪ್ರದೇಶದ ಜನರಿಗೆ ಅರಿವು ಮೂಡಿಸುವ ಸಲುವಾಗಿ ಹತ್ತು ದಿನಗಳ ಕಾಲ ಜಿಲ್ಲೆಯಾದ್ಯಂತ ಸಂಚರಿಸಲಿದೆ ಎಂದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಂಜುನಾಥ, ಜಿಲ್ಲಾ ವಾರ್ತಾಧಿಕಾರಿ ವಿನೋದ ಚಂದ್ರ ಹಾಜರಿದ್ದರು.