ಸಕಲೇಶಪುರ: ಚಿಕ್ಕನಾಯಕನಹಳ್ಳಿಯ ಸರ್ಕಾರಿ ಶಾಲೆಗೆ ನೀರು ಒದಗಿಸಲು ಅಳವಡಿಸಿದ್ದ ಪ್ಲಾಸ್ಟಿಕ್ ಟ್ಯಾಂಕ್ ಹಾನಿ ಉಂಟಾಗಿದ್ದು ಕಿಡಿಗೇಡಿಗಳ ಕೃತ್ಯ ಎಂದು ಶಂಕಿಸಲಾಗಿದೆ.
ಸರ್ಕಾರವು ಸರ್ಕಾರಿ ಶಾಲೆಯ ಮಕ್ಕಳಿಗೆ ಹಲವಾರು ಸೌಲಭ್ಯಗಳನ್ನು ಒದಗಿಸುತ್ತಿದ್ದು ಅದೇ ರೀತಿ ತಾಲೂಕಿನ ಬಾಳ್ಳುಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕನಾಯಕನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಆದರ್ಶ ಗ್ರಾಮದ ಯೋಜನೆ ಅಡಿಯಲ್ಲಿ ಸಾವಿರ ಲೀಟರ್ ಸಮರ್ಥ್ಯದ ನೀರಿನ ಟ್ಯಾಂಕ್ ನಿರ್ಮಾಣ ಮಾಡಲಾಗಿತ್ತು.
ಆದರೆ ಕಳೆದ ರಾತ್ರಿ ನೀರಿನ ಟ್ಯಾಂಕ್ ಸಂಪೂರ್ಣ ಧ್ವಂಸಗೊಂಡಿದ್ದು, ಈ ಘಟನೆ ಆಕಸ್ಮಿಕವಾಗಿ ನಡೆದಿದೆಯೋ ಅಥವಾ ಕಿಡಿಗೇಡಿಗಳ ಕೃತ್ಯವೊ ಎಂಬ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಈ ಘಟನೆ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ಒಂದು ವೇಳೆ ಕಿಡಿಗೇಡಿಗಳೇ ಇಂಥ ಕೆಲಸ ಮಾಡಿದ್ದರೆ ಅವರಿಗೆ ಕಾನೂನಿನಡಿ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಚಿಕ್ಕನಾಯಕನಹಳ್ಳಿ ವಾರ್ಡಿನ ಗ್ರಾಮ ಪಂಚಾಯಿತಿ ಸದಸ್ಯರು ಒತ್ತಾಯಿಸಿದ್ದಾರೆ.