ಹಾಸನ: ಬೇಲೂರಿನ ವಸತಿ ಶಾಲೆಯಲ್ಲಿ ನಡೆದಿರುವ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ನಡೆಸಿದವರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ದಲಿತ ಸಂಘಟನಾ ಸಮಿತಿ ಸದಸ್ಯರು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಬೇಲೂರಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಹಳೇಬೀಡಿನಲ್ಲಿರುವ ವಸತಿ ಶಾಲೆಯಲ್ಲಿ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಇಡೀ ನಾಗರಿಕ ಸಮಾಜವೇ ತಲೆತಗ್ಗಿಸುವಂತಾಗಿದೆ. ಇಂತಹ ಶಾಲೆಗಳಲ್ಲಿ ಬಡವರು, ದಲಿತರು, ಹಿಂದುಳಿದ ವರ್ಗದ ಮಕ್ಕಳೇ ವಿದ್ಯಾಭ್ಯಾಸಕ್ಕೆ ಸೇರಿರುತ್ತಾರೆ. ಆದರೆ ಮಕ್ಕಳಿಗೆ ಸಿಗುವ ಸವಲತ್ತುಗಳು ಸರಿಯಾಗಿ ಸಿಗುತ್ತಿಲ್ಲ. ಅಷ್ಟೇ ಅಲ್ಲದೆ ಮಾನಸಿಕ, ದೈಹಿಕ ಹಾಗೂ ಲೈಂಗಿಕ ದೌರ್ಜನ್ಯ ನಡೆಸುತ್ತಿರುವವರ ಮೇಲೆ ಯಾವುದೇ ಕ್ರಮ ಕೈಗೊಳ್ಳದೇ ಜಾಣ ಕುರುಡರಂತೆ ವರ್ತಿಸುತ್ತಿರುವ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳು ಹಾಗೂ ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳೇ ಇದಕ್ಕೆ ನೇರ ಹೊಣೆಗಾರರು ಎಂದು ಆರೋಪಿಸಿದರು.
ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದವರು ಮತ್ತು ಕುಮ್ಮಕ್ಕು ನೀಡಿದವರ ಮೇಲೆ ಎಸ್.ಸಿ-ಎಸ್.ಟಿ. ಫೋಕ್ಸೊ ಕಾಯಿದೆಯಡಿ ಕೇಸು ದಾಖಲಿಸಬೇಕು. ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳು ಹಾಗೂ ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳೇ ಇದಕ್ಕೆ ಹೊಣೆಗಾರರು. ಇವರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಚೇತನ್, ತೋಟೇಶ್, ಎನ್.ಸಿ. ಜಯರಾಮ್, ಲೋಕೇಶ್, ಮೇಲಪ್ಪ, ಶಶಿ ತಟ್ಟೆಕೆರೆ, ಮಹೇಶ್, ಕೆ.ಎನ್. ರಂಗಸ್ವಾಮಿ, ಬಿಂಧು ಭಾಗವಹಿಸಿದ್ದರು.