ಹಾಸನ: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಸರ್ಕಾರದ ದುರಾಡಳಿತದ ವಿರುದ್ದ ಎಎಪಿ ಮುಖಂಡ ಅಗಿಲೆ ಯೋಗೀಶ ನೇತೃತ್ವದಲ್ಲಿ ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಹೇಮಾವತಿ ಪ್ರತಿಮೆ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ಅಗಿಲೆ ಯೋಗೀಶ, ವಿಶ್ವ ಮಹಿಳಾ ದಿನಾಚರಣೆ ನಡೆಯುತ್ತಿರುವ ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಪ್ರತಿ ದಿನ ಅಡುಗೆ ಮಾಡುವ ಸಂದರ್ಭದಲ್ಲಿ ಕಣ್ಣೀರು ಹಾಕುವ ಸಂದರ್ಭ ಎದುರಾಗಿದ್ದು, ಅಡುಗೆ ಎಣ್ಣೆ, ಗ್ಯಾಸ್, ಪೆಟ್ರೋಲ್, ಡೀಸೆಲ್ ಸೇರಿದಂತೆ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಬಿಜೆಪಿ ಸರ್ಕಾರ ಜನ ಸಾಮಾನ್ಯರ ಬದುಕನ್ನು ದುಸ್ತರ ಆಗುವಂತೆ ಮಾಡಿದೆ ಎಂದರು.
ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರಗಳು ಜನರ ಜೀವನದ ಜೊತೆ ಚೆಲ್ಲಾಟ ಆಡುತ್ತಿದ್ದು, ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ತೆರಿಗೆ ಹಾಕುವ ಮೂಲಕ ತೆರಿಗೆ ಹೊರೆ ಹೆಚ್ಚಿಸಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನೀತಿ ಖಂಡಿಸಿ ಮತ್ತು ಬಿಜೆಪಿ ಸರ್ಕಾರದ ಭ್ರಷ್ಟಾಚಾರ ನೀತಿ ಖಂಡಿಸಿ ಇಂದು ಅಮ್ ಆದ್ಮಿ ಪಕ್ಷದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಡಿಸಿ ಕಚೇರಿ ಮುಂದೆ ಗ್ಯಾಸ್ ಸಿಲಿಂಡರ್ ಇಟ್ಟು ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.
೭೦೦ ರೂಪಾಯಿ ಇದ್ದ ಗ್ಯಾಸ್ ಬೆಲೆಯನ್ನು ೧೧೫೦ ರೂಪಾಯಿ ಮಾಡುವ ಮೂಲಕ ಜನ ಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿರುವ ಬಿಜೆಪಿ ಸರ್ಕಾರಕ್ಕೆ ಜನ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುವ ಅಗತ್ಯ ಇದೆ. ಈಗಾಗಲೇ ಬಿಜೆಪಿ ಶಾಸಕರ ಮನೆಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಹಣ ಸಿಕ್ಕಿರುವುದು ಅವರ ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿಯಾಗಿದೆ, ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಮ್ ಆದ್ಮಿ ಪಕ್ಷದ ಮುಖಂಡರಾದ ಮಂಜು, ಅಬೀಬ್, ಸುಂದರೇಶ, ರೆಹಮತ, ರಂಗಸ್ವಾಮಿ, ನಜೀರ್ ಇತರರು ಇದ್ದರು.