ಹಾಸನ: ನಗರದಲ್ಲಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕಾಮಗಾರಿಗಳನ್ನು ಪೂರ್ಣಗೊಳಿಸುವ ಮೂಲಕ ನಗರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿರುವ ಶಾಸಕ ಪ್ರೀತಂ ಗೌಡ ಅವರು ಈ ಚುನಾವಣೆಯಲ್ಲಿ ಹೆಚ್ಚು ಮತಗಳಿಂದ ಜಯ ಸಾಧಿಸಲಿದ್ದಾರೆ ಎಂದು ಬಿಜೆಪಿ ಮುಖಂಡ ಶ್ರೀಕಾಂತ ವಿಶ್ವಾಸ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರೀತಂ ಗೌಡ ಅವರು ಶಾಸಕರಾಗಿ ಅಧಿಕಾರ ವಹಿಸಿಕೊಂಡ ನಂತರ ಎರಡು ವರ್ಷ ಕೊರೋನ ಹಾವಳಿ ಸಂದರ್ಭದಲ್ಲಿ ಬಡವರು ಹಾಗೂ ಮಧ್ಯಮ ವರ್ಗದ ಜನರಿಗೆ ಫುಡ್ ಕಿಟ್ ವಿತರಣೆ ಸೇರಿದಂತೆ ಆರ್ಥಿಕ ಸಹಾಯ ಒದಗಿಸುವ ಮೂಲಕ ನೋವಿಗೆ ಸ್ಪಂದಿಸಿದ್ದಾರೆ. ನಂತರ ಹಾಸನ ನಗರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದು, ಸ್ತ್ರೀಶಕ್ತಿ ಸಂಘಗಳಿಗೆ ಸಾಲ ಸೌಲಭ್ಯ, ರಸ್ತೆ, ಒಳಚರಂಡಿ, ಉದ್ಯಾನವನ ನಿರ್ಮಾಣ, ವಿಮಾನ ನಿಲ್ದಾಣ ಕಾಮಗಾರಿಗೆ ಚಾಲನೆ, ರಿಂಗ್ ರಸ್ತೆ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯವನ್ನು ಒದಗಿಸಿದ್ದಾರೆ ಎಂದರು.
ರಾಜ್ಯದ 224 ವಿಧಾನಸಭಾ ಸದಸ್ಯರಲ್ಲಿಯೇ ಮಾದರಿ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದು, ಹಾಸನ ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಸರ್ವಾಂಗೀಣ ಅಭಿವೃದ್ಧಿ ಮಾಡಿದ್ದಾರೆ. ಆದ್ದರಿಂದ ವಿಧಾನಸಭೆ ಚುನಾವಣೆಯಲ್ಲಿ ಭಾರಿ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು.
ಕಳೆದ ಇಪ್ಪತ್ತು ವರ್ಷಗಳಿಂದ ಕನಿಷ್ಠ ಸೌಲಭ್ಯಗಳಿಂದ ವಂಚಿತರಾಗಿದ್ದ ಜನರಿಗೆ ಅಕ್ರಮ ಸಕ್ರಮ ಯೋಜನೆ ಅಡಿ 6,000 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿದ್ದಾರೆ. ನಗರಸಭೆ ವ್ಯಾಪ್ತಿಗೆ 25 ಗ್ರಾಮಗಳನ್ನು ಸೇರಿಸಲು ಸಚಿವ ಸಂಪುಟದಿಂದ ಅನುಮೋದನೆ ಪಡೆದು ಉತ್ತಮವಾದ ಕೆಲಸವನ್ನು ಮಾಡಿದ್ದು ವಸತಿ ಯೋಜನೆ ಅಡಿ 1 ಸಾವಿರ ಮನೆಗಳ ನಿರ್ಮಾಣ ಮಾಡಿಕೊಟ್ಟಿದ್ದಾರೆ. ಶಿಕ್ಷಣ ಕ್ಷೇತ್ರದ ಬೆಳವಣಿಗೆಗೆ ಒತ್ತು ನೀಡಿದ್ದು, ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ನೂರಾರು ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮುಂದಿನ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಿದ್ದಾರೆ.
ರಾಜ್ಯದಲ್ಲಿಯೆ ಮಾದರಿಯಾಗಿ ನಗರದಲ್ಲಿ ಫುಡ್ ಕೋರ್ಟ್ ನಿರ್ಮಾಣ ಮಾಡುವ ಮೂಲಕ ಬೀದಿ ಬದಿ ವ್ಯಾಪಾರಿಗಳು ಗೌರವಯುತವಾಗಿ ವ್ಯಾಪಾರ ನಡೆಸಲು ಕಾರಣರಾಗಿದ್ದಾರೆ ಎಂದರು. ಶಾಸಕರ ಅಭಿವೃದ್ಧಿಗೆ ಮೆಚ್ಚಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡಿದ್ದು ಮುಂದೆಯೂ ಸಹ ಪಕ್ಷದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಲಿದ್ದೇನೆ, ಬೇರೆ ಪಕ್ಷಕ್ಕೆ ಸೇರುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸತ್ಯಮಂಗಲದ ರಾಜೇಶ್, ಗಿರೀಶ್, ಅಣ್ಣಪ್ಪ ಶೆಟ್ಟರ್ ಇದ್ದರು.