ಹಾಸನ: ಕಾಂಗ್ರೆಸ್ ಪಕ್ಷದಲ್ಲಿ ಹಲವು ದಶಕಗಳ ಕಾಲ ಪ್ರಾಮಾಣಿಕವಾಗಿ ದುಡಿದಿದ್ದೇನೆ. ಇತ್ತೀಚಿನ ದ್ವೇಷ ರಾಜಕೀಯ ಬೆಳವಣಿಗೆಯಿಂದ ಬೇಸತ್ತಿದ್ದು, ಸಕ್ರಿಯ ರಾಜಕೀಯದಿಂದ ದೂರ ಉಳಿಯುವ ಕುರಿತು ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹುಡಾ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಕೃಷ್ಣಕುಮಾರ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಸಚಿವ ಮಹದೇವಪ್ಪ ಹಾಗೂ ಎ ಮಂಜು ಅವರ ಸಲಹೆ, ಸೂಚನೆ, ಮಾರ್ಗದರ್ಶನದಲ್ಲಿ ಹುಡಾ ಅಧ್ಯಕ್ಷನಾಗಿ ಉತ್ತಮ ಕೆಲಸ ಮಾಡಿದ್ದೇನೆ.
ದಲಿತ ಮುಖಂಡನಾಗಿ ಜಿಲ್ಲೆಯಲ್ಲಿ ಗುರುತಿಸಿಕೊಂಡಿದ್ದು, ಇದೀಗ ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷನಾಗಿ ನನ್ನನ್ನು ಆಯ್ಕೆ ಮಾಡಿದ್ದಾರೆ. ಈ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದ ಶಾಸಕ ಪ್ರೀತಂ ಜೆ. ಗೌಡ ಅವರು ನನ್ನ ಮನೆಗೆ ಭೇಟಿ ನೀಡಿ ಪಕ್ಷಕ್ಕೆ ಆಹ್ವಾನಿಸಿದರು. ಆದರೆ ಈ ಬಗ್ಗೆ ಯಾವುದೇ ತೀರ್ಮಾನಗಳನ್ನು ನಾನು ಹೇಳಿಲ್ಲ. ಇದೇ ಸಂದರ್ಭದಲ್ಲಿ ಕೆಲವರು ಶಾಸಕರು ಭೇಟಿ ಮಾಡಿದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರದರ್ಶಿಸಿ ನನಗೆ ಅವಹೇಳನ ಮಾಡಿದ್ದಾರೆ.
ಕಾಂಗ್ರೆಸ್ ಮುಖಂಡರಾದ ಎಚ್ ಕೆ ಮಹೇಶ್, ರಘು ಸೇರಿದಂತೆ ಇತರರು ಮಾನಸಿಕವಾಗಿ ತೇಜೋವಧೆ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಈ ಸಂಬಂಧ ಕೆಪಿಸಿಸಿ ಅಧ್ಯಕ್ಷರಿಗೂ ದೂರು ನೀಡುವುದರೊಂದಿಗೆ ಕಾನೂನು ಹೋರಾಟವನ್ನು ಮಾಡಲಾಗುವುದು ಎಂದರು.
ನಾನು ಇಂದಿಗೂ ಸಹ ಕಾಂಗ್ರೆಸ್ ಪಕ್ಷದಲ್ಲೇ ಸಕ್ರಿಯವಾಗಿದ್ದು ಸಾಮಾಜಿಕ ಜಾಲತಾಣದ ಮೂಲಕ ಪಕ್ಷ ತೊರದಿದ್ದಾರೆ ಎಂಬ ರೀತಿಯಲ್ಲಿ ಪೋಸ್ಟರ್ ಗಳನ್ನು ಮಾಡುತ್ತಿರುವುದು ಮತ್ತು ಸ್ಪಷ್ಟನೆ ನೀಡುವಂತೆ ರಾಜ್ಯ ನಾಯಕರು ಒತ್ತಾಯಿಸುತ್ತಿರುವುದನ್ನು ಗಮನಿಸಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ನಲ್ಲಿ ಉಳಿಯಬೇಕು ಅಥವಾ ಪಕ್ಷ ತೊರೆದು ಬೇರೆ ಪಕ್ಷಕ್ಕೆ ಸೇರಬೇಕು ಅಥವಾ ಸಕ್ರಿಯ ರಾಜಕೀಯದಿಂದ ದೂರ ಇರಬೇಕು ಎಂಬುದಾಗಿ ಸ್ಪಷ್ಟಪಡಿಸುವುದಾಗಿ ಹೇಳಿದರು.
ಈ ಸಂಬಂಧ ಹೆಚ್ ಸಿ ಮಹದೇವಪ್ಪ ಅವರ ಸಲಹೆ ಸೂಚನೆಯನ್ನು ಸಹ ಪಡೆಯುವುದಾಗಿ ಕೃಷ್ಣಕುಮಾರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ರಂಗಪ್ಪ, ಪ್ರೀತು, ಇತರರು ಇದ್ದರು.