ಹಾಸನ: ಮುಂಬರುವ ವಿಧಾನಸಭೆ ಚುನಾವಣೆ ಪ್ರಜಾಪ್ರಭುತ್ವ ವ್ಯವಸ್ಥೆಯ ಹಬ್ಬವಾಗಿದ್ದು, ಪಾರದರ್ಶಕ ಚುನಾವಣೆ ನಡೆಯುವ ನಿಟ್ಟಿನಲ್ಲಿ ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೆ ಮತದಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತ ಡಿ.ಎಂ ಮಂಜುನಾಥ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಪಾರದರ್ಶಕ ಚುನಾವಣೆ ನಡೆಸಲು ಸರ್ವ ಪ್ರಯತ್ನ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಮತದಾರರ ಸಹಕಾರವು ಅತ್ಯಗತ್ಯವಾಗಿದ್ದು, ಮತದಾರರು ಉಮೇದುದಾರರ ಯಾವುದೇ ಆಮಿಷಕ್ಕೆ ಒಳಗಾಗದೆ ನೈತಿಕ ಹಕ್ಕನ್ನು ಕಾಯ್ದುಕೊಳ್ಳಬೇಕು ಎಂದು ಕರೆ ನೀಡಿದರು.
ಈಗಾಗಲೇ ಚುನಾವಣಾ ಸಂದರ್ಭದಲ್ಲಿ ಮತದಾರರಿಗೆ ಆಮಿಷ ಒಡ್ಡುವ ಸಂದರ್ಭದಲ್ಲಿ 30ರಿಂದ 35 ಲಕ್ಷ ದಂಡ ವಸೂಲಿ ಮಾಡಲಾಗಿದೆ ಹಾಗೂ ಮತದಾರರಿಗೆ ಉಡುಗೊರೆಯಾಗಿ ನೀಡಲು ಸಂಗ್ರಹಿಸಿದ್ದ ಸೀರೆ, ಚಿನ್ನದ ಒಡವೆ ಸೇರಿದಂತೆ ಇತರೆ ವಸ್ತುಗಳನ್ನು ಪೊಲೀಸರಿಗೆ ಒಪ್ಪಿಸಲಾಗಿದೆ ಎಂದರು.
ಮತದಾನ ಪೂರ್ವ ಯಾವುದೇ ಅಕ್ರಮ ಚಟುವಟಿಕೆ ತಡೆಯುವ ನಿಟ್ಟಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಿಂದಲೂ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಅಕ್ರಮವಾಗಿ ಸಂಗ್ರಹಿಸಿರುವ ವಸ್ತುಗಳನ್ನು ಹಾಗೂ ದಾಖಲೆಯಿಲ್ಲದೆ ಸಾಗಾಟ ಮಾಡುವ ಪದಾರ್ಥ ಮತ್ತು ವಸ್ತುಗಳನ್ನು ವಶಕ್ಕೆ ಪಡೆಯಲಾಗುತ್ತಿದೆ ಹಾಗೂ ದಂಡ ವಿಧಿಸುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಚುನಾವಣಾ ಅಕ್ರಮ ತಡೆಯುವ ನಿಟ್ಟಿನಲ್ಲಿ ಆಯಾ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದು, ಸಾರ್ವಜನಿಕರಿಗೆ ಯಾವುದೇ ಅಕ್ರಮ ಕಂಡು ಬಂದಲ್ಲಿ ಮಾಹಿತಿಯನ್ನು ತಿಳಿಸಬಹುದಾಗಿದೆ ಎಂದು ಹೇಳಿದರು.