ಹಾಸನ: ಪ್ರಜಾಪ್ರಭುತ್ವ ಮೌಲ್ಯಗಳ ಸಂರಕ್ಷಣೆಗಾಗಿ ಹಾಗೂ ಸಂವಿಧಾನದ ಆಶಯಗಳನ್ನು ಪೂರೈಸುವ ನಿಟ್ಟಿನಲ್ಲಿ ಬಿಎಸ್‌ಪಿ ಅಭ್ಯರ್ಥಿಗಳಿಗೆ ಮತ ನೀಡುವಂತೆ ಬೇಲೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹಾಗೂ ಬಿಎಸ್‌ಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಗಂಗಾಧರ ಬಹುಜನ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಜಾಪ್ರಭುತ್ವ ಅರ್ಥಹೀನವಾಗುತ್ತಿದೆ. ರಾಜಕಾರಣ ಇಂದಿನ ಪರಿಸ್ಥಿತಿಯಲ್ಲಿ ಸೇವೆಯಾಗಿ ಉಳಿಯದೆ ಉದ್ಯಮವಾಗಿ ಬೆಳೆಯುತ್ತಿದೆ. ಇಂತಹ ಅಭ್ಯರ್ಥಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದ ನಂತರ ಲಾಭವನ್ನೇ ನಿರೀಕ್ಷಿಸುತ್ತಿರುತ್ತಾರೆ, ಆದ್ದರಿಂದ ಜನರಿಗೆ ಉತ್ತಮ ಸೇವೆ ಒದಗಿಸಲು ಸಾಧ್ಯವಿಲ್ಲ ಎಂದರು.
ಇಂತಹ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿದು ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಸರ್ಕಾರವನ್ನು ಅಸ್ತಿತ್ವಕ್ಕೆ ತರಲು ಬಹುಜನ ಸಮಾಜ ಪಾರ್ಟಿಯನ್ನು ಬೆಂಬಲಿಸಬೇಕು. ದೇಶದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಹಾಳು ಮಾಡಿರುವ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳನ್ನು ಅಧಿಕಾರದಿಂದ ದೂರವಿಡಬೇಕು ಎಂದು ಹೇಳಿದರು.
ಈಗಾಗಲೇ ಚುನಾವಣಾ ಪ್ರಣಾಳಿಕೆಯಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಜನಸಾಮಾನ್ಯರಿಗೆ ಸುಳ್ಳು ಭರವಸೆಗಳನ್ನು ನೀಡಿ ಮುಗ್ಧ ಮತದಾರರನ್ನು ಅನೇಕ ರೀತಿಯಲ್ಲಿ ಆಸೆ-ಆಮಿಷಗಳಿಗೆ ಗುರಿಯಾಗುವಂತೆ ಮಾಡುತ್ತಿದ್ದಾರೆ. ಇಂತಹ ಪ್ರಜಾಪ್ರಭುತ್ವ ವಿರೋಧಿಗಳನ್ನು ಅಧಿಕಾರದಿಂದ ದೂರವಿಡಬೇಕು ಎಂದರು.
ಹಾಸನ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಎಸ್‌ಪಿ ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಕೆಲ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಪರ ಇತರೆ ಪಕ್ಷಗಳು ಅಪಪ್ರಚಾರ ಮಾಡುತ್ತಿದೆ. ಆದರೆ ಇವೆಲ್ಲಾ ಸತ್ಯಕ್ಕೆ ದೂರವಾಗಿದ್ದು, ಮೌಲ್ಯಯುತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಬಿಎಸ್‌ಪಿ ಎಂದೂ ಸಹ ಹಿಂದೆ ಬಿಡುವುದಿಲ್ಲ ಎಂದರು.
ಬಿಎಸ್‌ಪಿ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಅತ್ನಿ, ಶಿವಮ್ಮ, ಸುರೇಂದ್ರ, ಕುಮಾರ, ಮಲ್ಲಯ್ಯ ಇದ್ದರು.