ಹಾಸನ: ಕಾಂಗ್ರೆಸ್ ಪಕ್ಷದಿಂದ ಬಿಡುಗಡೆ ಮಾಡಿರುವ ಪ್ರಣಾಳಿಕೆ ಒಪ್ಪಿ ಕ್ಷೇತ್ರದ ಮತದಾರರು ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲಿಸಲಿದ್ದಾರೆ ಎಂದು ಕಾಂಗ್ರೆಸ್ ಯುವ ಘಟಕದ ಜಿಲ್ಲಾ ಅಧ್ಯಕ್ಷ ರಂಜಿತ್ ಗೊರೂರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರಮುಖ ಐದು ಗ್ಯಾರಂಟಿಗಳನ್ನು ಜಾರಿಗೆ ತರಲಿದ್ದು, ಯುವಕರಿಗೆ ಹೆಚ್ಚು ಅನುಕೂಲವಾಗಲಿದೆ. ಪದವಿ ನಿರುದ್ಯೋಗ ಯುವಕರಿಗೆ 3000 ಪ್ರತಿ ತಿಂಗಳು ಹಾಗೂ ಡಿಪ್ಲೋಮಾ ಐಟಿಐ ವಿದ್ಯಾರ್ಥಿಗಳಿಗೆ ಒಂದು ಸಾವಿರ ಕೊಡಲು ತೀರ್ಮಾನ ಮಾಡಲಾಗಿದ್ದು, ಮಹಿಳೆಯರಿಗೆ ಹಾಗೂ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗದವರಿಗೆ ಹೆಚ್ಚಿನ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಣಾಳಿಕೆಯಲ್ಲಿ ಭರವಸೆಯನ್ನು ನೀಡಲಾಗಿದೆ ಎಂದು ಹೇಳಿದರು.
ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವ ಮೂಲಕ ಗೆಲುವಿಗೆ ಸಹಕಾರ ನೀಡಬೇಕು ಹಾಗೂ ಜನಪರ ಆಡಳಿತಕ್ಕೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು. ಹಾಸನ ವಿಧಾನಸಭಾ ಕ್ಷೇತ್ರ ಸೇರಿದಂತೆ ಕೆಲ ಕ್ಷೇತ್ರಗಳಿಗೆ ಕಾಂಗ್ರೆಸ್ ಮುಖಂಡರು ಕಾರಣಾಂತರಗಳಿಂದ ಪ್ರಚಾರಕ್ಕೆ ಬರಲು ಆಗಿಲ್ಲ ಎಂದ ಅವರು ಯಾವುದೇ ಪಕ್ಷದೊಂದಿಗೆ ಕಾಂಗ್ರೆಸ್ ಪಕ್ಷ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಫರ್ಮಾನ್, ಮಹಮ್ಮದ್ ಶಾಹಿದ್, ಸಹಿಲ್, ಮುಷ್ತಾಕ್ ಇದ್ದರು.