ಹಾಸನ: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ರಾಜ್ಯದಲ್ಲಿ ಸಂಚರಿಸಿದ ಪಂಚರತ್ನ ಯಾತ್ರೆ ಮಾ. 26ರಂದು ಮೈಸೂರಿನಲ್ಲಿ ಸಮಾರೋಪಗೊಳ್ಳಲಿದ್ದು ಅದ್ದೂರಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಎಸ್. ದೇವೇಗೌಡ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಎಚ್. ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಈಗಾಗಲೇ ರಾಜ್ಯದ 90 ವಿಧಾನಸಭಾ ಕ್ಷೇತ್ರಗಳಿಗೆ ಪಂಚರತ್ನ ಯಾತ್ರೆ ಸಂಚಾರ ಮಾಡಿದ್ದು ಜನರಿಂದ ಉತ್ತಮ ಬೆಂಬಲ ವ್ಯಕ್ತವಾಗಿದೆ. ಮಾ. 26ರಂದು ಮೈಸೂರಿನ ಚಾಮುಂಡೇಶ್ವರಿ ಬೆಟ್ಟದ ತಪ್ಪಲಿನಲ್ಲಿ ಮಧ್ಯಾಹ್ನ 2 ಗಂಟೆಗೆ ಸಮಾರೋಪ ಸಮಾರಂಭ ಯೋಜಿಸಲಾಗಿದ್ದು, ಸಮಾರಂಭದಲ್ಲಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ ಇಬ್ರಾಹಿಂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಸೇರಿದಂತೆ ರಾಜ್ಯದಲ್ಲಿನ ಜೆಡಿಎಸ್ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.
ಸಮಾರಂಭಕ್ಕೆ ಸುಮಾರು 10 ಲಕ್ಷಕ್ಕೂ ಹೆಚ್ಚು ಮಂದಿ ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸುವ ನಿರೀಕ್ಷೆ ಇದ್ದು, ಹಾಸನ ಜಿಲ್ಲೆಯಿಂದ ಪ್ರತಿ ಪಂಚಾಯತಿ ಮೂಲಕ ಮೂರರಿಂದ ನಾಲ್ಕು ಸಾವಿರ ಮಂದಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಪಕ್ಷದ ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ವಕ್ತಾರ ಹೊಂಗೆರೆ ರಘು, ಜಯರಾಮ್, ಗಿರೀಶ್ ಚನ್ನವೀರಪ್ಪ, ಅಕ್ಬರ್, ಕ್ರಾಂತಿ ಇದ್ದರು.