ಬೇಲೂರು: ಸಮಾಜದಲ್ಲಿ ಮಹಿಳೆಯರಿಗೂ ಪುರುಷರಷ್ಟೇ ಸರಿಸಮಾನ ಸ್ಥಾನಮಾನ ಕಲ್ಪಿಸಬೇಕೆಂದು 12ನೇ ಶತಮಾನದಲ್ಲಿಯೇ ಹೋರಾಟ ಮಾಡಿದ ಧೀರ ವನಿತೆ ಅಕ್ಕಮಹಾದೇವಿಯು ಇಂದಿನ ಮಹಿಳೆಯರ ಬದುಕಿಗೆ ಆದರ್ಶ ಎಂದು ತಹಶೀಲ್ದಾರ್ ಎಂ.ಮಮತಾ ಹೇಳಿದರು.
ರಾಷ್ಟ್ರೀಯ ಹಬ್ಬದ ಆಚರಣೆ ಸಮಿತಿ ವತಿಯಿಂದ ತಾಲೂಕು ಆಡಳಿತ ಸೌಧದಲ್ಲಿ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿಧಾನ ಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸಾಂಕೇತಿಕವಾಗಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸರಳವಾಗಿ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ. ಸಮಾಜದಲ್ಲಿ ಸಾಮರಸ್ಯ ಮೂಡಿಸಲು, ಅಂಕುಡೊಂಕುಗಳನ್ನು ತಿದ್ದಲು ಶ್ರಮಿಸಿದ ಅಕ್ಕಮಹಾದೇವಿಯವರ ಹೆಸರು ಇತಿಹಾಸದ ಪುಟದಲ್ಲಿ ಉಳಿದುಕೊಂಡಿದ್ದು, ಅವರ ಆದರ್ಶಗಳು ಇಂದಿನ ಮಹಿಳೆಯರಿಗೆ ದಾರಿದೀಪವಾಗಿದೆ ಎಂದರು.
ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಸಿಬ್ಬಂದಿಗಳು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.